ನಟ ನರೇಶ್, ಪವಿತ್ರಾ ಲೋಕೇಶ್ ಜೋಡಿಯ `ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ.
ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ. ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ.
‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.