ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ
ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಹದಿನೇಳು ದಿನಗಳ ಚಿತ್ರೀಕರಣ ನಡೆದಿದೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿ ಮಾಲೀಕರಾದ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ರಾಮಚಂದ್ರಯ್ಯ ಕೆ.ಜಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಗಾಯಕರಾಗಿ ಹೆಸರು ಮಾಡಿರುವ ಶಶಾಂಕ್ ಶೇಷಗಿರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ನೂತನ ಚಿತ್ರಕ್ಕಿದೆ.
ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಶಿವಮಣಿ(ನಿರ್ದೇಶಕ), ಅಶ್ವಿನ್ ಹಾಸನ್, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಕನ್ನಡದ ಚಿತ್ರರಂಗದ ಖ್ಯಾತ ನಟರೊಬ್ಬರು ಚಿತ್ರದ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.