ತೆರೆಗೆ ಬರಲು ರೆಡಿಯಾದ ರಾಜೇಂದ್ರ ಬಾಬು ನಿರ್ದೇಶನದ “ರಕ್ತ ಕಾಶ್ಮೀರ”
ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ಅಂತು ಇಂತೂ ತೆರೆಗೆ ಬರಲು ಸಜ್ಜಾಗಿದೆ ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
ಎಂಡಿಎಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ ರಕ್ತ ಕಾಶ್ಮೀರ” ಚಿತ್ರದಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ.
ಎಸ್ ವಿ ರಾಜೇಂದ್ರಸಿಂಗ್ ಬಾಬು “ರಕ್ತ ಕಾಶ್ಮೀರ” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್ ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ರಮ್ಯ, ದೊಡ್ಡಣ್ಣ, ಓಂಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.